ತುಮಕೂರು ಜಿಲ್ಲೆಯ ತಿಪಟೂರಿನ ನೊಣವಿನಕೆರೆ ಶ್ರೀ ಕಾಡುಸಿದ್ದೇಶ್ವರ ಮಠದ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿಗಳು, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಆಪ್ತ ಸಲಹೆಗಾರರಂತೆ ಇದ್ದಾರೆ ಎನ್ನಲಾಗುತ್ತಿದೆ. ಧಾರ್ಮಿಕ ನಂಬಿಕೆ ಮತ್ತು ಆಧ್ಯಾತ್ಮಿಕ ಮಾರ್ಗದರ್ಶನಕ್ಕೆ ಮಹತ್ವ ನೀಡುವ ಡಿ.ಕೆ. ಶಿವಕುಮಾರ್, ಯಾವುದೇ ಮಹತ್ವದ ನಿರ್ಧಾರಕ್ಕೂ ಮುನ್ನ ಶ್ರೀಗಳ ಸಲಹೆ ಪಡೆಯುವ ಪದ್ಧತಿಯನ್ನು ಮುಂದುವರಿಸಿಕೊಂಡಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಇತ್ತೀಚೆಗೆ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ದೆಹಲಿಗೆ ಕರೆಸಿದ್ದ ಸಂದರ್ಭದಲ್ಲಿ, “ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಖಚಿತ” ಎಂದು ಶಿವಯೋಗೀಶ್ವರ ಶ್ರೀಗಳು ಭವಿಷ್ಯ ನುಡಿದಿದ್ದರು ಎನ್ನಲಾಗಿದೆ. ಇದೀಗ ಆ ಮಾತು ನಿಜವಾಗುವ ಹಂತ ತಲುಪಿರುವುದಾಗಿ ಹೇಳಲಾಗುತ್ತಿದೆ.
ಈ ನಡುವೆ, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವವರೆಗೂ ಹೆಚ್ಚು ಮಾತನಾಡದೇ ಮೌನವಾಗಿರುವಂತೆ ಶ್ರೀಗಳು ಡಿ.ಕೆ. ಶಿವಕುಮಾರ್ ಅವರಿಗೆ ಸೂಚನೆ ನೀಡಿದ್ದಾರಂತೆ. “ಅಗತ್ಯಕ್ಕಿಂತ ಹೆಚ್ಚು ಮಾತನಾಡಿದರೆ ಕೆಲಸಕ್ಕೆ ಅಡ್ಡಿಯಾಗಬಹುದು” ಎಂಬ ಎಚ್ಚರಿಕೆಯನ್ನು ಕೂಡ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಸಲಹೆಯ ಹಿನ್ನೆಲೆಯಲ್ಲಿ, ಡಿ.ಕೆ. ಶಿವಕುಮಾರ್ ಹಾಗೂ ಅವರ ಸಹೋದರ ಡಿ.ಕೆ. ಸುರೇಶ್ ಅವರು ಬೆಂಬಲಿಗರು ಮತ್ತು ಕಾರ್ಯಕರ್ತರು ಅನಗತ್ಯ ಹೇಳಿಕೆಗಳನ್ನು ನೀಡದಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ರಾಜಕೀಯ ಬೆಳವಣಿಗೆಗಳ ನಡುವೆಯೇ ಸಹೋದರರಿಬ್ಬರೂ ಇತ್ತೀಚಿನ ದಿನಗಳಲ್ಲಿ ಹೆಚ್ಚು ಮೌನವಾಗಿರುವುದು ಈ ಕಾರಣಕ್ಕೇ ಎಂದು ಚರ್ಚೆಗಳು ನಡೆಯುತ್ತಿವೆ.

